ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಹಿರಿಯ ಅರ್ಥಧಾರಿ, ಪ್ರವಚನಕಾರ, ನಿವೃತ್ತ ಉಪನ್ಯಾಸಕ ಸಾಂತೂರು ಸದಾಶಿವ ರಾವ್ ಹಾಗೂ ಅರ್ಥಧಾರಿ, ಲೇಖಕ, ನಿವೃತ್ತ ಉಪನ್ಯಾಸಕ ಎಂ. ಎನ್. ಹೆಗಡೆ ಯಲ್ಲಾಪುರ ಆಯ್ಕೆಯಾಗಿದ್ದಾರೆ.


ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 25, ಶುಕ್ರವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ 20,000/- ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನು ಒಳಗೊಂಡಿರುತ್ತದೆ.