ಪುತ್ತೂರು: ಸಮಾಜವು ಶಿಕ್ಷಕನಿಂದ ಬಹಳವಾಗಿ ನಿರೀಕ್ಷಿಸುತ್ತದೆ ಆ ನಿರೀಕ್ಷೆಗಳನ್ನು ಹುಸಿಗೊಳಿಸದೆ ಶಿಕ್ಷಕನು ಸಮಾಜಕ್ಕೆ ಬೆಳಕು ನೀಡುವ ಆದರ್ಶ ವ್ಯಕ್ತಿತ್ವವಾಗಬೇಕು ಎಂದು ಸುಳ್ಯದ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಆಶ್ರಯದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ವಿಷಯದ ಜ್ಞಾನ ಹುದುಗಿರುತ್ತದೆ ಅದನ್ನು ಹೊರಗೆಡಹುವ ಕ್ರಿಯಾಶಕ್ತಿ ಅಧ್ಯಾಪಕನಲ್ಲಿರಬೇಕು. ಅಧ್ಯಾಪನ ಮಾತ್ರವಲ್ಲದೆ ವ್ಯಕ್ತಿತ್ವ ನಿರ್ಮಾಣವೂ ಅವನ ಧ್ಯೇಯವಾಗಬೇಕು ಎಂದರು. ಮೆಖಾಲೆ ಶಿಕ್ಷಣ ಪದ್ದತಿಯ ಫಲವನ್ನು ನಾವೆಲ್ಲರೂ ಅನುಭವಿಸುವಂತಾಗಿದೆ. ಸಾಮರ್ಥ್ಯ ಇದ್ದರೂ ಸೌಜನ್ಯ ಇಲ್ಲದ ವಿದ್ಯಾರ್ಥಿಗಳನ್ನು ನಾವು ಕಾಣುವಂತಾಗಿದೆ ಎಂದರು. ಶಿಕ್ಷಕನ ಬಗೆಗಿನ ಬದಲಾದ ಸಾಮಾಜಿಕ ದೃಷ್ಟಿಕೋನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ರಾಜಕೀಯದ ಪ್ರವೇಶದಿಂದಾಗಿ ಶಿಕ್ಷಕನಿಗೆ ಯಾವುದೇ ಪ್ರಾಶಸ್ತ್ಯವಿಲ್ಲದಂತಾಗುತ್ತಿರುವುದು ದುರಂತ ಎಂದು ಅಭಿಪ್ರಾಯ ಪಟ್ಟರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಮೋಹನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಷಯವಾರು ಉತ್ತಮ ಫಲಿತಾಂಶವನ್ನು ದಾಖಲಿಸಿದ ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು, ಹಾರು ಬೂದಿಯಿಂದ ಕಾಂಕ್ರೀಟ್ ಬೀಮ್‌ಗಳ ತಯಾರಿಕೆಯ ಬಗ್ಗೆ ಪೇಟೆಂಟ್ ಪಡೆದಿರುವ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಸುರೇಖ ಅವರನ್ನು ಸನ್ಮಾನಿಸಲಾಯಿತು.
ಕೆಎಸ್‌ಸಿಎಸ್‌ಟಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ರಾಜ್ಯಮಟ್ಟದ ಉತ್ತಮ ಪ್ರಾಜೆಕ್ಟ್ ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿಯರಾದ ಪ್ರೊ. ಜೀವಿತ ಹಾಗೂ ಪ್ರೊ. ರೇಶ್ಮಾ ಪೈ ಅವರನ್ನು ಗೌರವಿಸಲಾಯಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದ ಕಾಲೇಜಿನ ತಂಡಕ್ಕೆ ಮಾರ್ಗದರ್ಶನವನ್ನು ನೀಡಿದ್ದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಾದ ವಿಶ್ಮಿತಾ.ಕೆ.ಶೆಟ್ಟಿ ಸ್ವಾಗತಿಸಿ, ಸಂತೃಪ್ತಿ.ಎಸ್ ವಂದಿಸಿದರು. ವರುಣ್ ಕಾರ್ಯಕ್ರಮ ನಿರ್ವಹಿಸಿದರು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು