

ಪ್ರಥಮ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಕಾರಣಕ್ಕೆ 17 ವರ್ಷದ ಬಾಲಕಿಯೊಬ್ಬಳು ನ.28ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರಿನ ತನ್ನ ನಿವಾಸದಲ್ಲಿ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮೃತಳನ್ನು ಪೆರ್ಡೂರಿನ ನಿವಾಸಿ ತೃಪ್ತಿ (17) ಎಂದು ಗುರುತಿಸಲಾಗಿದೆ. ಹೆಬ್ರಿಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು.
ಪೊಲೀಸರ ಪ್ರಕಾರ, ತೃಪ್ತಿ ತನ್ನ ಅಧ್ಯಯನದಲ್ಲಿ ನಿಪುಣೆಯಾಗಿದ್ದಳು. ಆದರೆ ಇತ್ತೀಚಿನ ಪರೀಕ್ಷೆಯಲ್ಲಿ ಅವಳು ಕಡಿಮೆ ಅಂಕಗಳನ್ನು ಗಳಿಸಿದ್ದಳು. ಭಾನುವಾರ ಬೆಳಗ್ಗೆ ವಿಶೇಷ ತರಗತಿಗೆ ಹೋಗಿ ಮನೆಗೆ ಮರಳಿದ್ದಳು.
ಬಳಿಕ ಕೊಠಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ಪಾಲಕರು ತೃಪ್ತಿ ತನ್ನ ಕೊಠಡಿಯ ಸೀಲಿಂಗ್‌ಗೆ ನೇಣು ಬಿಗಿದುಕೊಂಡಿರುವುದನ್ನು ಗಮನಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
“ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದರೆ ದಯವಿಟ್ಟು ಮಾನಸಿಕ ತಜ್ಞರ ಸಹಾಯವನ್ನು ಪಡೆದುಕೊಳ್ಳಿ“